
ಬೆಳ್ತಂಗಡಿ; ತಾಲೂಕಿನ ಮೆಲಂತಬೆಟ್ಟು ಗ್ರಾಮದ ಮೂಡಲ ನಿವಾಸಿ ಸೂರಪ್ಪ ಪೂಜಾರಿ ಎಂಬವರ ಜಾಗದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲಿನ ಕೋರೆಗೆ ಶನಿವಾರ ಸಂಜೆ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಬೆಳ್ತಂಗಡಿ ಪೊಲೀಸರ ತಂಡ ಜಂಟಿ ಕಾರ್ಯಾಚರಣೆಯಲ್ಲಿ ದಾಳಿ ನಡೆಸಿದ್ದು ಸ್ಪೋಟಕಗಳು ಸೇರಿದಂತೆ ಸೊತ್ತುಗಳನ್ನು ವಶಪಡಿಸಿಕೊಂಡದ್ದಲ್ಲದೆ ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಸೇರರಿದಂತೆ ಹಲವರನ್ನು ಬಂಧಿಸಿದ್ದಾರೆ.
ಈ ಕಲ್ಲಿನಕೋರೆ ಯಾವುದೇ ಸಮರ್ಪಕವಾದ ದಾಖಲೆಗಳಿಲ್ಲದೆ ನಡೆಯುತ್ತಿತ್ತು. ಈ ಕಲ್ಲಿನ ಕೋರೆಯನ್ನು
ಬಿಜೆಪಿ ಮುಖಂಡ ಪ್ರಮೋದ್ ದಿಡುಪೆ ಹಾಗೂ
ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಎಂಬವರು ನಡೆಸುತ್ತಿದ್ದರು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಶಶಿರಾಹ್ ಶೆಟ್ಟಿ ಅವರನ್ನು ಬಂಧಿಸಿದ್ದಾರೆ.
ದಾಳಿಯ ವೇಳೆ ಒಂದು ಹಿಟಾಚಿ, ಒಂದು ಕಂಪ್ರೆಸರ್ ಮೆಷಿನ್, ಒಂದು ಕಾರನ್ನು ಹಾಗೂ ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿರುವುದಾಗಿ ತಿಳಿದು ಬಂದಿದೆ. ವಶಪಡಿಸಿಕೊಂಡ ಸೊತ್ತುಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸುತ್ತುದ್ದಾರೆ.
ಕಳೆದ ಕೆಲವು ಸಮಯಗಳಿಂದ ಇಲ್ಲಿ ಕಲ್ಲಿನ ಕೋರೆ ಅಕ್ರಮವಾಗಿ ನಡೆಯುತ್ತಿದ್ದು ಈಬಗ್ಗೆ ದೂರುಗಳು ಬಂದ ಹಿನ್ನಲೆಯಲ್ಲಿ ತಹಶೀಲ್ದಾರರು ಪೊಲೀಸರ ಸಹಕಾರದೊಂದಿಗೆ ದಾಳಿ ನಡೆಸಲಾಗಿದೆ.
ಯುವ ಮೋರ್ಚಾ ಅಧ್ಯಕ್ಷನ ಬಂಧನ ಪ್ರತಿಭಟನೆ;
ಕಲ್ಲಿನ ಕೋರೆಯನ್ನು ನಡೆಸುತ್ತಿದ್ದಾರೆ ಎನ್ನಲಾಗಿರುವ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ರಾತ್ರಿಯ ವೇಳೆ ಪೊಲೀಸರು ಬಂಧಿಸಿದ್ದಾರೆ. ಯುವ ಮೋರ್ಚಾ ಅಧ್ಯಕ್ಷನ ಬಂಧನದ ಬಗ್ಗೆ ಮಾಹಿತಿ ತಿಳಿದು ತಡ ರಾತ್ರಿಯ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಯ ಎದುರು ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡು ಪ್ರತಿಭಟನೆ ಆರಂಭಿಸಿದರು. ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಹರೀಶ್ ಪೂಂಜ ಅವರು ಪೊಲೀಸರ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಯುವಮೋರ್ಚಾ ಅಧ್ಯಕ್ಷ ಶಶಿ ರಾಜ್ ಶೆಟ್ಟಿ ಅವರನ್ನು ರಾತ್ರಿ ಮನೆಗೆ ನುಗ್ಗಿ ಅಕ್ರಮವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿದ ಶಾಸಕರು ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಪಕ್ಷದ ಕಾರ್ಯಕರ್ತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಸರಕಾರದ ಪೊಲೀಸರ ಈ ನೀತಿಯ ವಿರುದ್ದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಬೆಳಗ್ಗಿನ ಜಾವದ ವರೆಗೂ ಕಾರ್ಯಕರ್ತರ ತಂಡ ಠಾಣೆಯ ಎದುರು ಜಮಾವಣೆಯಾಗಿದ್ದರು.
ಬಿಜೆಪಿ ತಾಲೂಕು ಅಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಇತರರು ಇದ್ದರು.
