Home ರಾಜಕೀಯ ಸಮಾಚಾರ ಯಡಿಯೂರಪ್ಪ ಬಂಧನಕ್ಕೆ ಕ್ಷಣಗಣನೆ

ಯಡಿಯೂರಪ್ಪ ಬಂಧನಕ್ಕೆ ಕ್ಷಣಗಣನೆ

255
0

ಬೆಂಗಳೂರು; ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ಕೋರಿ ಸಿಐಡಿ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯ ಪುರಸ್ಕರಿಸಿದ್ದು, ಯಾವುದೇ ಕ್ಷಣದಲ್ಲಿ ಯಡಿಯೂರಪ್ಪ ಅವರ ಬಂಧನ ಆಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ.

ರೇಪ್ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ ಹದಿನೇಳು ವರ್ಷದ ಬಾಲಕಿಯನ್ನು ರೂಮಿನಲ್ಲಿ ಕರೆದುಕೊಂಡು ಆಕೆಯ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಪ್ರಕರಣದಲ್ಲಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಬುಧವಾರ ಮನವಿ ಮಾಡಿತ್ತು.

ಈ ಕುರಿತ ಅರ್ಜಿಯನ್ನು ನಗರದ 51ನೇ ಸಿವಿಲ್ ಮತ್ತು ಹೆಚ್ಚುವರಿ ಸೆಷನ್ಸ್ ಹಾಗೂ ಪೋಕ್ಸೊ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶ ಎನ್.ಎಂ. ರಮೇಶ್ ಗುರುವಾರ ವಿಚಾರಣೆ ನಡೆಸಿದರು‌.

ವಿಚಾರಣೆ ವೇಳೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ನಾಯಕ್ ವಾದ ಮಂಡಿಸಿ, “ಆರೋಪಿಯು ತುಂಬಾ ಬಲಾಢ್ಯರು.‌ ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಇವರ ಇಬ್ಬರು ಪುತ್ರರಲ್ಲಿ ಒಬ್ಬರು ಹಾಲಿ ಸಂಸದರು ಹಾಗೂ ಮತ್ತೊಬ್ಬರು ಪಕ್ಷವೊಂದರ ರಾಜ್ಯ ಘಟಕದ ಅಧ್ಯಕ್ಷರು. ಇಂತಹವರು ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗುತ್ತಿಲ್ಲ. ಬರದೆ ಸಮಯ ಕೇಳುತ್ತಿದ್ದಾರೆ” ಎಂದು ಹೇಳಿದರು.

“ಘಟನೆ ನಡೆದ ದಿನವೇ ಯಡಿಯೂರಪ್ಪ ಸಂತ್ರಸ್ತ ಬಾಲಕಿಯ ತಾಯಿಗೆ ₹2 ಲಕ್ಷ ನೀಡಿದ್ದಾರೆ. ಬೇಡ ಎಂದರೂ ಅವರ ಪರ್ಸಿನಲ್ಲಿ ತುರುಕಿ ಕಳಿಸಿದ್ದಾರೆ. ನೀನು ಕಷ್ಟದಲ್ಲಿ ಇದ್ದೀಯ. ಇಟ್ಟುಕೊ ಎಂದು ಸಮಾಧಾನ ಮಾಡುವ ನೆಪದಲ್ಲಿ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ಆ ತಾಯಿ ಮಾಡಿಕೊಂಡಿದ್ದ ವಿಡಿಯೊ ಡಿಲಿಟ್ ಮಾಡಿಸಿದ್ದಾರೆ. ಹೀಗೆ ಹಲವು ಹಂತಗಳಲ್ಲಿ ಸಾಕ್ಷ್ಯ ನಾಶ ಮಾಡುತ್ತಲೇ ಇದ್ದಾರೆ” ಎಂದು ಕೋರ್ಟ್‌ ಗಮನಕ್ಕೆ ತಂದರು.

“ಒಂದು ವೇಳೆ ಅವರು ಕೇಳಿದಷ್ಟು ಸಮಯ ನೀಡಿದ್ದೇ ಆದರೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶ ಮಾಡುವ ಸಾಧ್ಯತೆ ಇದೆ. ಆದ್ದರಿಂದ, ಕೂಡಲೇ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲು ಆದೇಶಿಸಬೇಕು” ಎಂದು ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ನಾಯಕ್ ಕೋರಿದರು.

ವಾದ ಆಲಿಸಿದ ನ್ಯಾಯಾಧೀಶ ಎನ್ ಎಂ ರಮೇಶ್ ಅವರು ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ​ವಾರಂಟ್ ಆದೇಶ ಪ್ರಕಟಿಸಿದರು.

ಪ್ರಕರಣದ ಹಿನ್ನೆಲೆ

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ರಾಜ್ಯ ಸರ್ಕಾರ ಪೋಕ್ಸೊ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು.

ಪ್ರಕರಣ ದಾಖಲಾದ ಬಳಿಕ ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ಯಡಿಯೂರಪ್ಪ ಹಾಜರಾಗಿ, “ದೂರು ನೀಡಿದ್ದ ಮಹಿಳೆಗೆ ಇತರರ ವಿರುದ್ಧ ದೂರು ನೀಡುವುದು ಒಂದು ಹವ್ಯಾಸವಾಗಿದೆ” ಎಂದು ಪೊಲೀಸರಿಗೆ ತಿಳಿಸಿದ್ದರು.

ಅಪ್ರಾಪ್ತ ಪುತ್ರಿಯೊಂದಿಗೆ ಯಡಿಯೂರಪ್ಪ ಅವರು ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ದೂರು ನೀಡಿದ್ದ ಬಾಲಕಿಯ ತಾಯಿ ಕಳೆದ ತಿಂಗಳು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಸಂತ್ರಸ್ತೆಯ ಸಹೋದರ ಹೈಕೋರ್ಟ್​ಗೆ ರಿಟ್ ಅರ್ಜಿ

ಯಡಿಯೂರಪ್ಪ ಅವರನ್ನು ಪೋಕ್ಸೊ ಪ್ರಕರಣದಲ್ಲಿ ಬಂಧಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

“ಪ್ರಕರಣ ದಾಖಲಾಗಿ ಹಲವು ತಿಂಗಳುಗಳಾದರೂ ಪೊಲೀಸರಿಂದ ಯಾವುದೇ ಕ್ರಮವಿಲ್ಲ. ಯಡಿಯೂರಪ್ಪರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ. ಕನಿಷ್ಠ 41ಎ ಅಡಿ ನೋಟಿಸ್ ನೀಡಿ ಯಡಿಯೂರಪ್ಪರನ್ನು ವಿಚಾರಣೆಗೆ ಕರೆದಿಲ್ಲ” ಎಂದು ರಿಟ್‌ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

“ಬಿಎಸ್‌ವೈ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ. ದೂರುದಾರರಾಗಿರುವ ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ್ಯ ನಡೆದು ಹಲವು ತಿಂಗಳಾದರೂ ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಯಡಿಯೂರಪ್ಪರನ್ನು ಕೂಡಲೇ ಬಂಧಿಸುವಂತೆ ನಿರ್ದೇಶಿಸಬೇಕೆಂದು” ಸಂತ್ರಸ್ತೆಯ ಸಹೋದರ ರಿಟ್ ಅರ್ಜಿಯಲ್ಲಿ ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here