
ಬೆಳ್ತಂಗಡಿ; ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್ಸಿ-2 ಪೊಕ್ಸ್ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್. ಅವರು 3 ವರ್ಷ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.
ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಸಂಜೀವ ನಾಯ್ಕ (57) ಶಿಕ್ಷೆಗೊಳಗಾದವನು. ಈತ ಜ.23ರಂದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸ್ ನಿರೀಕ್ಷಕ ರವಿ ಬಿ.ಎಸ್. ತನಿಖೆ ಪೂರ್ಣಗೊಳಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರು ಸಾಕ್ಷ್ಯ, ದಾಖಲೆಗಳು, ಪೂರಕ ಸಾಕ್ಷ್ಯ ಹಾಗೂ ವಾದ ವಿವಾದವನ್ನು ಆಲಿಸಿ ಆರೋಪಿ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಭಾರತೀಯ ದಂಡ ಸಂಹಿತೆ ಮತ್ತು ಪೊಕ್ಸ್ ಕಾಯ್ದೆಯಂತೆ 3 ವರ್ಷಗಳ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದ್ದಾರೆ.
ದಂಡದ ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 25,000 ರೂ. ಪರಿಹಾರವನ್ನು ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ.