ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಪ್ರಕ್ರಿಯೆ ನಡೆದು ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಜಯರಾಜ್ ಜೈನ್ ಮರು ಆಯ್ಕೆಯಾಗಿದ್ದಾರೆ. ನ.16ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮಾರಿಗುಡಿ ಸಮೀಪದ ಏಕತಾ ಸೌಧದಲ್ಲಿ ಚುನಾವಣೆ ನಡೆಯಿತು. ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಗೆ ಒಟ್ಟು 7 ಮಂದಿ ಅಂತಿಮ ಅಭ್ಯರ್ಥಿಗಳು ಕಣದಲ್ಲಿದ್ದರು.
ಅಧ್ಯಕ್ಷ ಸ್ಥಾನಕ್ಕೆ ಸರಕಾರಿ ಪ್ರಾಥಮಿಕ ಶಾಲೆಗಳ ಜಯರಾಜ ಜೈನ್ ಹಾಗೂ ಗ್ರಾಮೀಣಾಭಿವೃದ್ಧಿ ಪಟ್ಟಣ ಪಂಚಾಯತ್ ರಾಜ್ ಇಲಾಖೆಯ ಪ್ರಶಾಂತ್ ಡಿ. ಬಳಂಜ ನಾಮಪತ್ರ ಸಲ್ಲಿಸಿದ್ದು ಚುನಾವಣೆಯಲ್ಲಿ ಜಯರಾಜ ಜೈನ್ ಅಧ್ಯಕ್ಷರಾಗಿ ಆಯ್ಕೆಯಾದರು. ಖಜಾಂಜಿ ಸ್ಥಾನಕ್ಕೆ ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ ಇಲಾಖೆಯ ನಾರಾಯಣ ಶೆಟ್ಟಿ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯ ಸೇವೆಯ ಸದಾಶಿವ ಭಟ್ ಕೆ. ಅಂತಿಮ ಕಣದಲ್ಲಿದ್ದರು. ಖಜಾಂಚಿಯಾಗಿ ಜಲಸಂಪನ್ಮೂಲ, ಸಣ್ಣ ನೀರಾವರಿ ಇಲಾಖೆಯ ನಾರಾಯಣ ಶೆಟ್ಟಿ ಆಯ್ಕೆಯಾಗಿದ್ದಾರೆ.
ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ಸರಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ಆನಂದ ಡಿ., ಕಂದಾಯ ಇಲಾಖೆಯ ಪ್ರದೀಪ್ ಕುಮಾರ್ ಸಿ. ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೋಮನಾಥ ಆರ್. ಅವರ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಚುನಾವಣೆಯಲ್ಲಿ ಕಂದಾಯ ಇಲಾಖೆಯ ಪ್ರದೀಪ್ ಕುಮಾರ್ ಸಿ. ರಾಜ್ಯ ಪರಿಷತ್ ಸದಸ್ಯರಾಗಿ ನೇಮಕಗೊಂಡಿದ್ದಾರೆ.