
ಬೆಳ್ತಂಗಡಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜಿಲ್ಲಾಡಳಿತ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಿದ ಬೆನ್ನಲ್ಲಿಯೇ ಜಿಲ್ಲೆಯಾದ್ಯಂತ ಭಾರೀ ಮಳೆ ಆರಂಭಗೊಂಡಿದೆ.
ಮೇ 23 ರವರೆಗೂ ಗಾಳಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿತ್ತು.
ಮಂಗಳವಾರ ಬೆಳಗ್ಗಿನಿಂದಲೇ ಭಾರೀ ಮಳೆ;
ಬೆಳ್ತಂಗಡಿ ತಾಲೂಕಿನಲ್ಲಿ ಮಂಗಳವಾರ ಬೆಳಗ್ಗಿನಿಂದಲೇ ನಿರಂತರ ಮಳೆ ಸುರಿಯುತ್ತಿದೆ. ಸೋಮವಾರ ರಾತ್ರಿಯೇ ಮಳೆ ಆರಂಭಗೊಂಡಿದ್ದು ಮಂಗಳವಾರ ಬೆಳಗ್ಗಿನ ವೇಳೆಗೆ ಬಿರುಸು ಪಡೆದುಕೊಂಡಿದೆ. ಮೇ 21 ಹಾಗೂ 22 ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು ಮಳೆಯ ಅಬ್ಬರ ಇನ್ನಷ್ಟು ಹೆಚ್ಚಾಗುವ ಅಪಾಯವಿದೆ.
ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ನೀರು ನುಗ್ಗುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿಯೇ ಇದ್ದಹ ಸ್ಥಿತಿಗತಿಗಳನ್ನು ಪರಿಶೀಲಿಸುವಂತೆ ಸೂಚನೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ನದಿಗಳ ಸಮೀಪಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.