

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಮತ್ತು ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಜುಲೈ 25ರಂದು (ಶುಕ್ರವಾರ) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಕಳೆದ 24 ಗಂಟೆಗಳಿಂದ ಮಳೆ ತನ್ನ ಆರ್ಭಟವನ್ನು ಮುಂದುವರಿಸಿದ್ದು. ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ.
ಆದೇಶದ ಅನ್ವಯ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪದವಿಪೂರ್ವ ಕಾಲೇಜುಗಳು ಹಾಗೂ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
