ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು
ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್
ತೆರವುಗೊಳಿಸಿದ್ದು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ವರ ವಿಚಾರಣೆ ನಡೆಸಲು ಎಸ್.ಐ.ಟಿ ತಂಡ ಸಿದ್ದತೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.
ಹೈಕೋರ್ಟ್ ನ ಬುಧನಾರ ನೀಡಿದ ಈ ಆದೇಶದಿಂದ ಎಸ್‌ಐಟಿ ತನಿಖೆಗೆ ಹಾಗೂ ಮಹೇಶ್ ಶೆಟ್ಟಿ ಹಾಗೂ ಇತರರ ವಿಚಾರಣೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಿದೆ. ಪ್ರಕರಣದಲ್ಲಿ ಪಿತೂರಿ ನಡೆಸಿದ. ಆರೋಪ ಎದುರಿಸುತ್ತಿರುವ ಗಿರೀಶ್ ಮಟ್ಟಣ್ಣನವರ್. ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ ಮತ್ತು ವಿಠಲೌಡ ಅವರಿಗೆ ಎಸ್‌ಐಟಿ ವಿಚಾರಣೆಗೆ, ಹಾಜರಾಗಲೇ ಬೇಕಾದ ಅನಿವಾರ್ಯತೆ ಎದುರಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ (FIR No. 39/2025), ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಸೇರಿ ನಾಲ್ವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಸಕಾರದ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಎಫ್‌ಐಆರ್ಗೆ ತಡೆ ನೀಡಿ ಅಕ್ಟೋಬರ್ 30ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿತಲ್ಲದೆ, ಅರ್ಜಿಯನ್ನು ಮೆರಿಟ್ ಆಧಾರದಲ್ಲಿ ವಿಚಾರಣೆ ನಡೆಸುವುದಾಗಿ ತಿಳಿಸಿ. ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿತು.
ಇದಕ್ಕೂ ಮುನ್ನ ರಾಜ್ಯ ಹೆಚ್ಚುವರಿ ಸರಕಾರಿ ಅಭಿಯೋಜಕ ಬಿ.ಎನ್.ಜಗದೀಶ್ ವಾದ ಮಂಡಿಸಿ, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದಿಲ್ಲ ಎಂದು ಕೋರ್ಟ್ ಗೆ. ಸುಳ್ಳು ಮಾಹಿತಿ ನೀಡಿ ಅರ್ಜಿದಾರರು ತಡೆಯಾಜ್ಞೆ ಪಡೆದುಕೊಂಡಿದ್ದಾರೆ. ಆದರೆ, ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಿಸಲು ಹಾಗೂ ನೋಟಿಸ್ ನೀಡಲು ಮ್ಯಾಜಿಸ್ಟ್ರೇಟ್ ಅನುಮತಿ ಪಡೆಯಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರಲ್ಲದೆ, ಅನುಮತಿಯ ಪ್ರತಿಯನ್ನು ಕೋರ್ಟ್ಸ್ ಸಲ್ಲಿಸಿದರು.
ವಾದ ಮುಂದುವರಿಸಿದ ಬಿ.ಎನ್. ಜಗದೀಶ್, ಈ ಹಿಂದೆ ಎಸ್‌ಐಟಿ ತನಿಖೆಯನ್ನು ಶ್ಲಾಘಿಸಿದ್ದ ಅರ್ಜಿದಾರರು, ಈಗ ಅವರಿಗೇ ನೋಟಿಸ್ ನೀಡುತ್ತಿದ್ದಂತೆಯೇ ಕಿರುಕುಳ ಎಂದು ಆರೋಪಿಸಿ ಕೋರ್ಟ್ ಗೆ ಬಂದಿದ್ದಾರೆ. ಈ ಹಿಂದೆ ನೀಡಿದ್ದ ನೋಟಿಸ್ ಗಳಿಗೂ, ಈಗ ನೀಡಿರುವ ನೋಟಿಸ್ ಗಳಿಗೂ ಸಂಬಂಧವಿಲ್ಲ. ಈ ಹಿಂದೆ ಅರ್ಜಿದಾರರನ್ನು ಸಾಕ್ಷಿಗಳಾಗಿ ವಿವರಣೆ ಕೇಳಲು ನೋಟಿಸ್ ನೀಡಲಾಗಿತ್ತು. ಈಗ ಅವರನ್ನು ಆರೋಪಿಗಳನ್ನಾಗಿಸಲಾಗಿದ್ದು, ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ ಇದರಲ್ಲಿ ಕಿರುಕುಳದ ಪ್ರಶ್ನೆಯೇ ಇಲ್ಲ ಎಫ್‌ಐಆರ್ ಗೆ ತಡೆಯಾಜ್ಞೆ ನೀಡಿರುವುದರಿಂದ ತನಿಖೆಗೆ ಅಡ್ಡಿಯಾಗುತ್ತಿದೆ. ಆದ್ದರಿಂದ, ಈ ಹಿಂದೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಕೋರಿದರು.
ಈ ವಾದವನ್ನು ನ್ಯಾಯಾಲಯ ಪುರಸ್ಕರಿಸಿದೆ.
ಈ ಆದೇಶದ ಬಗ್ಗೆ ಸಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದ್ದಾರೆ. ಪ್ರಕರಣದ ಬಗ್ಗೆ ಸಮಗ್ರವಾದ ತನಿಖೆ ನಡೆಯಲಿ ಸತ್ಯ ಹೊರ ಬರಲಿ ಎಂದಿದ್ದಾರೆ. ಹೋರಾಟಗಾರರಿಗೆ ಕಿರುಕುಳ ನೀಡದಂತೆ ನ್ಯಾಯಾಲಯ ಸೂಚನೆ ನೀಡಿದೆ ತನಿಖೆಯೊಂದಿಗೆ ಸಹಕರಿಸಲು ನಾವು ಸಿದ್ದ ಎಂದಿದ್ದಾರೆ.
