ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಸುರತ್ಕಲ್ ನಿವಾಸಿ ಅಣ್ಣಪ್ಪ ಸ್ವಾಮಿ @ ಮನು ಎಂಬಾತನಾಗಿದ್ದಾನೆ.
ಈತ ಮಾದಕವಸ್ತುಗಳ ಮಾರಾಟಕ್ಕೆ ಪ್ರಯತ್ನಿಸುತ್ತಿರುವ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಜೂ 25 ರಂದು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು ₹1,50,000 ಮೌಲ್ಯದ 15 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಜಿಪ್ ಲಾಕ್ ಕವರ್, ಡಿಜಿಟಲ್ ತೂಕಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,10,500/- ಆಗಿರುತ್ತದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಅಣ್ಣಪ್ಪ ಸ್ವಾಮಿ @ ಮನು ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಬಜಪೆ ಠಾಣೆಗಳಲ್ಲಿ ಎನ್.ಡಿ.ಪಿ. ಎಸ್ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಮಸೀದಿಗೆ ಕಲ್ಲು ಎಸೆದಿರುವ ಪ್ರಕರಣ ಮತ್ತು ಉಳ್ಳಾಲ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ.
ಈ ಯಶಸ್ವಿ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಡೆಸಿದ್ದು, ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.
