
ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಶಿರ್ಲಾಲು ಗ್ರಾಮದಲ್ಲಿ ಎಸ್‌ಐಆರ್ ಕರ್ತವ್ಯ ನಿರ್ವಹಣೆಗೆ ತೆರಳಿದ್ದ ಪರಿಶಿಷ್ಟ ಜಾತಿಯ ಬಿಎಲ್‌ಒ ಅವರಿಗೆ ಜಾತಿ ನಿಂದನೆ ಮಾಡಿ ಅವಮಾನಿಸಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಹದ್ದಾಗಿದ್ದು, ಇದು ಕೇವಲ ಒಬ್ಬ ಸರ್ಕಾರಿ ಸಿಬ್ಬಂದಿಯ ಮೇಲಿನ ಅವಮಾನವಲ್ಲ, ಭಾರತದ ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳಿಗೆ ಎಸಗಿರುವ ಬಹಿರಂಗ ಸವಾಲಾಗಿದೆ ಎಂದು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸ್ವಾತಂತ್ರ್ಯ ಲಭಿಸಿ ಏಳು ದಶಕಗಳಿಗೂ ಹೆಚ್ಚು ಕಾಲ ಕಳೆದರೂ ಜಾತಿಯ ಹೆಸರಿನಲ್ಲಿ ಮನುಷ್ಯರನ್ನು ಅವಮಾನಿಸುವ ಮನೋಭಾವ ಇನ್ನೂ ಜೀವಂತವಾಗಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಸಂವಿಧಾನ ನೀಡಿರುವ ಸಮಾನತೆ, ಘನತೆ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಧಿಕ್ಕರಿಸುವ ಇಂತಹ ಕೃತ್ಯಗಳ ವಿರುದ್ಧ ಸರ್ಕಾರ ಮತ್ತು ಪೊಲೀಸ್ ಇಲಾಖೆ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಆಗ್ರಹಿಸಿದ್ದಾರೆ.
ಸಾರ್ವಜನಿಕ ಸೇವೆ ಸಲ್ಲಿಸುತ್ತಿದ್ದ ಸರ್ಕಾರಿ ಸಿಬ್ಬಂದಿಯನ್ನು ಅವರ ಜಾತಿಯ ಹೆಸರಿನಲ್ಲಿ ಅವಮಾನಿಸುವುದು ಕಾನೂನುಬಾಹಿರ ಮಾತ್ರವಲ್ಲ, ಪ್ರಜಾಪ್ರಭುತ್ವದ ಮೌಲ್ಯಗಳ ಮೇಲಿನ ನೇರ ದಾಳಿಯಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ತಪ್ಪಿತಸ್ಥರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಕಠಿಣ ಕ್ರಮ ಜರುಗಿಸಿ, ಕಾನೂನಿನ ಮುಂದೆ ಯಾರೂ ಮೇಲಾಗಿಲ್ಲ ಎಂಬ ಸಂದೇಶವನ್ನು ಸರ್ಕಾರ ಸ್ಪಷ್ಟವಾಗಿ ನೀಡಬೇಕು ಎಂದು ಎಸ್‌ಡಿಪಿಐ ಒತ್ತಾಯಿಸಿದೆ.
ಬಿಎಲ್‌ಒ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ, ತನಿಖೆಯನ್ನು ವಿಳಂಬಗೊಳಿಸದೆ ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಆಗ್ರಹಿಸಿದೆ.










