
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಸಂಘಟನಾ ಸೃಜನ್ ಅಭಿಯಾನ’ ದ ಅಂಗವಾಗಿ ಬೆಳ್ತಂಗಡಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು.
.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪಕ್ಷದ ಸಂಘಟನೆಯನ್ನು ಬಲಪಡಿಸುವಲ್ಲಿ ತಳಮಟ್ಟದ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕಾರ್ಯಕರ್ತರ ಅಭಿಪ್ರಾಯ, ಸಲಹೆ ಹಾಗೂ ಅನುಭವಗಳನ್ನು ಆಧರಿಸಿ ಸಂಘಟನೆಯ ಮುಂದಿನ ರೂಪುರೇಷೆಗಳನ್ನು ರೂಪಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷವು ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಸಕ್ರಿಯವಾಗಿರುವ ಸಂಘಟನೆಯಾಗದೆ, ಜನರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುವ ಜನಪರ ಸಂಘಟನೆಯಾಗಿ ಮತ್ತಷ್ಟು ಬಲಿಷ್ಠಗೊಳ್ಳಬೇಕು. ಅದಕ್ಕಾಗಿ ಗ್ರಾಮ, ಬೂತ್ ಹಾಗೂ ಬ್ಲಾಕ್ ಮಟ್ಟದಿಂದ ಪಕ್ಷದ ಸಂಘಟನೆಯನ್ನು ವ್ಯವಸ್ಥಿತವಾಗಿ ಕಟ್ಟುವ ಅಗತ್ಯವಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಆಯ್ಕೆ ಸೇರಿದಂತೆ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ವಹಿಸಿಕೊಳ್ಳುವ ನಾಯಕರ ಆಯ್ಕೆಯಲ್ಲಿ ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯಕ್ಕೆ ಆದ್ಯತೆ ನೀಡಲಾಗುತ್ತಿದೆ. ಹಿರಿಯ ನಾಯಕರು, ಜನಪ್ರತಿನಿಧಿಗಳು ಹಾಗೂ ಸಾಮಾನ್ಯ ಕಾರ್ಯಕರ್ತರ ನಡುವೆ ಮುಕ್ತ ಸಮಾಲೋಚನೆ ನಡೆಸುವ ಮೂಲಕ ಸಂಘಟನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ರಕ್ಷಿತ್ ಶಿವರಾಂ ತಿಳಿಸಿದರು.
ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರ ನೇಮಕದ ಬಗ್ಗೆ ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿಯ ವತಿಯಿಂದ ನಡೆಯುತ್ತಿರುವ ಸಂಘಟನೆ ಸೃಜನ್ ಅಭಿಯಾನ ಕಾರ್ಯಕ್ರಮಕ್ಕೆ ಬೆಳ್ತಂಗಡಿಗೆ ಆಗಮಿಸಿದ
ಎಐಸಿಸಿ ವೀಕ್ಷಕರು ಹಾಗೂ ಕೇರಳ ಕೋಝಿಕ್ಕೋಡ್ ಉತ್ತರ ಕ್ಷೇತ್ರದ ಶಾಸಕ ಕೆ. ಜಯಂತ್ ಮಾತನಾಡಿ
ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಅಭಿಪ್ರಾಯಕ್ಕೂ ಗೌರವವಿದೆ. ಕಾಂಗ್ರೆಸ್‌ನ ನಿಜವಾದ ಶಕ್ತಿ ಕಾರ್ಯಕರ್ತರು. ಅವರೊಂದಿಗೆ ನಿರಂತರ ಸಂವಾದ ನಡೆಸಿ, ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ, ಜನರ ಧ್ವನಿಯಾಗಿ ಪಕ್ಷವನ್ನು ಬಲಪಡಿಸುವುದು ಸಂಘಟನಾ ಸೃಜನ್ ಅಭಿಯಾನದ ಆಶಯವಾಗಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಕೆ ಹರೀಶ್ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಉಪಸ್ಥಿತರಿದ್ದರು.ಸಭೆಯಲ್ಲಿ, ಉಸ್ತುವಾರಿಗಳು, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಟಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ, ಹಾಗೂ ಪಕ್ಷದ ರಾಜ್ಯಾ ಜಿಲ್ಲೆ ತಾಲೂಕು, ಗ್ರಾಮ ಮಟ್ಟದ ಪದಾಧಿಕಾರಿಗಳು, ಹಿರಿಯ ಕಾಂಗ್ರೆಸ್ಸಿಗರು, ಸರ್ಕಾರದ ನಾಮನಿರ್ದೇಶಿತ ಸದಸ್ಯರು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಿ ಸಂಘಟನೆಯ ಬಲವರ್ಧನೆ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.




