ಬೆಳ್ತಂಗಡಿ: ಶಾಲೆಗೆ ತೆರಳಲು ರಿಕ್ಷಾದಲ್ಲಿ ಸಂಚರಿಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಗೆ ಅನುಚಿತವಾಗಿ ವರ್ತಿಸಿ, ಜೀವ ಬೆದರಿಕೆ ಒಡ್ಡಿ, ಬಳಿಕ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಜಮಾಲುದ್ದೀನ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿ ಕೆಲವು ತಿಂಗಳುಗಳಿಂದ ಆರೋಪಿಯ ರಿಕ್ಷಾದಲ್ಲಿ ಶಾಲೆಗೆ ತೆರಳಿ ಬರುತ್ತಿದ್ದಳು. ಈ ವೇಳೆ ಆರೋಪಿ ಆಕೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಬಾಲಕಿ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದಾಗ ಆರೋಪಿ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಇದರಿಂದ ಹೆದರಿದ ಬಾಲಕಿ ಈ ವಿಚಾರವನ್ನು ಯಾರಿಗೂ ತಿಳಿಸಿರಲಿಲ್ಲ.
ಆರೋಪಿಯು ಆಗಸ್ಟ್ 13ರಂದು ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಮನೆಗೆ ಬಂದು ಬೆದರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಕುರಿತು ಬಾಲಕಿ ಆಗಸ್ಟ್ 15ರಂದು ನೀಡಿದ ದೂರಿನ ಆಧಾರದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. BNS 2023ರ ಕಲಂ 75(2), 64(1), 65(1), 351(3) ಹಾಗೂ ಪೋಕ್ಸೋ ಕಾಯ್ದೆ–2012ರ ಕಲಂ 4(2), 8, 12ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.










