Home ರಾಜಕೀಯ ಸಮಾಚಾರ ಪಿಂಚಣಿಗೆ ಆದಾಯ ಮಿತಿ ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಳ: ಬಡಜನರ ಕಣ್ಣೀರು ಒರೆಸಿದ ಐತಿಹಾಸಿಕ...

ಪಿಂಚಣಿಗೆ ಆದಾಯ ಮಿತಿ ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಳ: ಬಡಜನರ ಕಣ್ಣೀರು ಒರೆಸಿದ ಐತಿಹಾಸಿಕ ತೀರ್ಮಾನ — ರಕ್ಷಿತ್ ಶಿವರಾಂ

5
0

ಬೆಳ್ತಂಗಡಿ: ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿದ್ದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದ್ದು, ಪಿಂಚಣಿ ಪಡೆಯಲು ಈ ಹಿಂದೆ ವಿಧಿಸಲಾಗಿದ್ದ ವಾರ್ಷಿಕ ಆದಾಯ ಮಿತಿಯನ್ನು ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ದೊಡ್ಡ ನೆಮ್ಮದಿ ನೀಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಫಲಾನುಭವಿಗಳ ಪೈಕಿ 23,14,544 ಫಲಾನುಭವಿಗಳ ದಾಖಲೆಗಳು ಸಂಶಯಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ, ಮೊಬೈಲ್ ಆ್ಯಪ್ ಮೂಲಕ ಭೌತಿಕ ದಾಖಲಾತಿಗಳನ್ನು ಪರಿಶೀಲನೆ ನಡೆಸಲಾಗಿತ್ತು. ಈ ಪರಿಶೀಲನೆಯ ಸಂದರ್ಭದಲ್ಲಿ 18,06,032 ಪಿಂಚಣಿದಾರರ ಆದಾಯ ಮಿತಿ ಹೆಚ್ಚಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವರ ಪಿಂಚಣಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು.

ಆದರೆ ಇದೀಗ ರಾಜ್ಯ ಸರ್ಕಾರ ಮಾನವೀಯ ಹಾಗೂ ಜನಪರ ನಿಲುವು ತಳೆದು ಪಿಂಚಣಿ ಫಲಾನುಭವಿಗಳ ಆದಾಯ ಮಿತಿಯನ್ನು ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಿಸುವ ಮೂಲಕ ಆದಾಯ ಮಿತಿ ಕಾರಣದಿಂದ ತಡೆಹಿಡಿಯಲಾಗಿದ್ದ 18,06,032 ಪಿಂಚಣಿದಾರರಿಗೆ ಮತ್ತೆ ಪಿಂಚಣಿ ಮುಂದುವರಿಸಲು ಅವಕಾಶ ಕಲ್ಪಿಸಿರುವುದು ಅತ್ಯಂತ ಮಹತ್ವದ ನಿರ್ಧಾರವಾಗಿದೆ ಎಂದು ಅವರು ತಿಳಿಸಿದ್ದಾರೆ.

“ಬಡವರು, ವೃದ್ಧರು, ವಿಧವೆಯರು, ಅಂಗವಿಕಲರು ಹಾಗೂ ಸಮಾಜದ ದುರ್ಬಲ ವರ್ಗದವರಿಗೆ ಸಾಮಾಜಿಕ ಭದ್ರತೆ ಒದಗಿಸುವುದು ಸರ್ಕಾರದ ಕರ್ತವ್ಯ. ಆದಾಯ ಮಿತಿ ಹೆಚ್ಚಿಸುವ ಮೂಲಕ ಲಕ್ಷಾಂತರ ಕುಟುಂಬಗಳಿಗೆ ಮತ್ತೆ ಆರ್ಥಿಕ ಭದ್ರತೆ ಕಲ್ಪಿಸಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಈ ನಿರ್ಧಾರ ನಿಜಕ್ಕೂ ಐತಿಹಾಸಿಕವಾಗಿದೆ. ಇದು ಕೇವಲ ಆಡಳಿತಾತ್ಮಕ ತೀರ್ಮಾನವಲ್ಲ; ಸಂಕಷ್ಟದಲ್ಲಿರುವ ಬಡಜನರ ಕಣ್ಣೀರು ಒರೆಸುವ ಮಾನವೀಯ ನಿರ್ಧಾರವಾಗಿದೆ” ಎಂದು ರಕ್ಷಿತ್ ಶಿವರಾಂ ಹೇಳಿದ್ದಾರೆ.

ಬಡವರ ಪರವಾಗಿ ನಿರಂತರವಾಗಿ ಕೆಲಸ ಮಾಡುತ್ತಿರುವ ರಾಜ್ಯ ಸರ್ಕಾರದ ಈ ಜನಪರ ನಿರ್ಧಾರವನ್ನು ಸ್ವಾಗತಿಸುವುದಾಗಿ ತಿಳಿಸಿರುವ ಅವರು, ಲಕ್ಷಾಂತರ ಪಿಂಚಣಿದಾರರಿಗೆ ಮತ್ತೆ ಸಾಮಾಜಿಕ ಭದ್ರತೆಯ ಆಶಾಕಿರಣ ಮೂಡಿಸಿರುವ ರಾಜ್ಯ ಸರ್ಕಾರಕ್ಕೆ ಬಡಜನರ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು ಎಂದು ರಕ್ಷಿತ್ ಶಿವರಾಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here