
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎರಡು ಸರ್ಕಾರಿ ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರ ಒಟ್ಟು ₹51.45 ಲಕ್ಷ ಅನುದಾನ ಮಂಜೂರು ಮಾಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಶಿಪಟ್ಟಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ನೂತನ ಕೊಠಡಿಗಳ ನಿರ್ಮಾಣಕ್ಕೆ ₹34.30 ಲಕ್ಷ ಹಾಗೂ ನಿಟ್ಟಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ಕೊಠಡಿ ನಿರ್ಮಾಣಕ್ಕೆ ₹17.15 ಲಕ್ಷ ಅನುದಾನವನ್ನು ಸರ್ಕಾರ ಮಂಜೂರು ಮಾಡಿದೆ.
ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಈ ಕ್ರಮ ಶ್ಲಾಘನೀಯವಾಗಿದೆ. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ರಕ್ಷಿತ್ ಶಿವರಾಂ ಹೇಳಿದರು.
ಈ ಮಹತ್ವದ ಅನುದಾನವನ್ನು ಮಂಜೂರು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರಕ್ಕೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರಿಗೆ ರಕ್ಷಿತ್ ಶಿವರಾಂ ಅವರು ಅಭಿನಂದನೆ ಸಲ್ಲಿಸಿದ್ದಾರೆ.