ಮಂಗಳೂರು: ಮಂಗಳೂರು ನಗರದಲ್ಲಿ ಮನೆಕಳ್ಳತನ ನಡೆಸಿ ರೈಲಿನಲ್ಲಿ ದೆಹಲಿಗೆ ಪರಾರಿಯಾಗುತ್ತಿದ್ದ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಗುಜರಾತ್‌ನ ವಡೋದರಾದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಅರ್ಮಾನ್ ಖಾನ್ @ ಅಮನ್ ಸೋನಿ (34) ಹಾಗೂ ಸಂಜೀವ್ ಕುಮಾರ್ @ ಜಾನಿ (34) ಎಂದು ಗುರುತಿಸಲಾಗಿದೆ.
ಸೆಪ್ಟೆಂಬರ್ 28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿಯ ಮನೆಯೊಂದರ ಬಾಗಿಲಿನ ಕೊಂಡಿ ಮುರಿದು ಒಳನುಗ್ಗಿದ ಕಳ್ಳರು ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಸೊತ್ತುಗಳನ್ನು ಕಳವು ಮಾಡಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆಪ್ಟೆಂಬರ್ 27ರಂದು ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲಿ ಲಾಕರ್ ಒಡೆದು ಕಳವು ಮಾಡಲು ಯತ್ನಿಸಿ, ಚೆಕ್ ಪುಸ್ತಕಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು.
ಪ್ರಕರಣಗಳ ತನಿಖೆ ನಡೆಸಿದ ಪೊಲೀಸರು ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿ, ಅವರು ರೈಲಿನಲ್ಲಿ ದೆಹಲಿ ಕಡೆಗೆ ತೆರಳುತ್ತಿರುವುದನ್ನು ಪತ್ತೆಹಚ್ಚಿದರು. ಬಳಿಕ ಗುಜರಾತ್‌ನ ವಡೋದರಾ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ, ಸೆಪ್ಟೆಂಬರ್ 29ರಂದು ಇಬ್ಬರು ಆರೋಪಿಗಳನ್ನು ಬಂಧಿಸಿದರು.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಆರೋಪಿಗಳನ್ನು ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಂಧಿತರ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿಯಿದ್ದು, ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿದ್ದು, ಪ್ರಕರಣದ ಮುಂದಿನ ತನಿಖೆ ಮುಂದುವರಿದಿದೆ.
