Home ಅಪರಾಧ ಲೋಕ ಕೋರಿಯರ್ ಮೂಲಕ MDMA ಸಾಗಾಟದ ಸಂಚು ಬಯಲು; ಮಂಗಳೂರಿನಲ್ಲಿ ಮೂವರು ಆರೋಪಿಗಳ ಬಂಧನ; ₹1.58 ಕೋಟಿ...

ಕೋರಿಯರ್ ಮೂಲಕ MDMA ಸಾಗಾಟದ ಸಂಚು ಬಯಲು; ಮಂಗಳೂರಿನಲ್ಲಿ ಮೂವರು ಆರೋಪಿಗಳ ಬಂಧನ; ₹1.58 ಕೋಟಿ ಮೌಲ್ಯದ 1.796 ಕೆ.ಜಿ. ಎಂಡಿಎಂಎ ವಶ

2
0

ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಅಡಗಿಸಿಟ್ಟು ಎಂಡಿಎಂಎ (MDMA) ಮಾದಕವಸ್ತುವನ್ನು ಮಂಗಳೂರಿಗೆ ಸಾಗಿಸಿ, ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿ, ₹1.58 ಕೋಟಿ ಮೌಲ್ಯದ 1 ಕೆ.ಜಿ. 796.96 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.
ಅಕ್ಟೋಬರ್ 8ರಂದು ರಾತ್ರಿ 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಸಮೀಪ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಎಂಡಿಎಂಎ ಜೊತೆಗೆ ಮೂರು ಮೊಬೈಲ್ ಫೋನ್‌ಗಳು, ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳು
ಕೇರಳದ ಕಾಸರಗೋಡು ಜಿಲ್ಲೆಯ ಮಂಗಳ್ಪಾಡಿ ನಿವಾಸಿ ಅಬ್ದುಲ್ ಹಾಪೀಲ್ (25), ಮಂಗಳೂರಿನ ಕೂಳೂರು ಕಸಬಾ ಬೆಂಗ್ರೆ ನಿವಾಸಿ ಜಿಯಾವುಲ್ ಹಕ್ (30) ಹಾಗೂ ಮಂಗಳೂರಿನ ಪಾಂಡೇಶ್ವರದ ಆಯಿಷಾ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಅಲ್ತಾಫ್ (28) ಬಂಧಿತ ಆರೋಪಿಗಳು.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಂಜಾಬ್‌ನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ವಾಟರ್ ಪ್ಯೂರಿಫೈಯರ್‌ನ ನೀರು ಸಂಗ್ರಹಿಸುವ ಭಾಗದಲ್ಲಿ ಅಡಗಿಸಿಟ್ಟು ಕೋರಿಯರ್ ಮೂಲಕ ಮಂಗಳೂರಿಗೆ ಸಾಗಿಸಲು ಯೋಜಿಸಿದ್ದರು. ಬಳಿಕ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಆರೋಪಿಗಳ ಪೈಕಿ ಅಬ್ದುಲ್ ಹಾಪೀಲ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು. ಜಿಯಾವುಲ್ ಹಕ್ ದುಬೈನ ರಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ತಾಫ್ ವಿರುದ್ಧವೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಚಾರಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here