Home ಸ್ಥಳೀಯ ಸಮಾಚಾರ 15 ದಿನಗಳಿಂದ ಕುಡಿಯುವ ನೀರಿಲ್ಲ: ನೆರಿಯದಲ್ಲಿ ಗ್ರಾಮಸ್ಥರ ಪ್ರತಿಭಟನೆ

15 ದಿನಗಳಿಂದ ಕುಡಿಯುವ ನೀರಿಲ್ಲ: ನೆರಿಯದಲ್ಲಿ ಗ್ರಾಮಸ್ಥರ ಪ್ರತಿಭಟನೆ

0

ಬೆಳ್ತಂಗಡಿ: ನೆರಿಯ ಗ್ರಾಮದ ಪರಂದಾಡಿ ಪಾದೆಗುಡ್ಡೆ ಜನತಾ ಕಾಲೋನಿ ಪ್ರದೇಶಕ್ಕೆ ಕಳೆದ 15 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಸೋಮವಾರ ನೆರಿಯ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಾಲೋನಿಯ ನಿವಾಸಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದೆ ತೀವ್ರ ತೊಂದರೆ ಎದುರಿಸುವಂತಾಗಿದೆ. ಹಲವು ದಿನಗಳಿಂದ ನೀರಿಲ್ಲದೆ ಪರದಾಡುತ್ತಿದ್ದರೂ ಸಮಸ್ಯೆಗೆ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯಿತಿ ಕಚೇರಿ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಸೋಮವಾರ ಸಂಜೆಯೊಳಗೆ ನೀರು ಪೂರೈಕೆ ಆರಂಭವಾಗಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸ್ಥಳಕ್ಕೆ ಆಗಮಿಸಿ ಸ್ಪಷ್ಟ ಭರವಸೆ ನೀಡುವವರೆಗೆ ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು.

ಬಳಿಕ ಸ್ಥಳಕ್ಕೆ ಆಗಮಿಸಿದ ಪಿಡಿಒ, ಶೀಘ್ರದಲ್ಲೇ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು. ಈ ಭರವಸೆಯ ಬಳಿಕ ಗ್ರಾಮಸ್ಥರು ಪ್ರತಿಭಟನೆಯನ್ನು ಹಿಂಪಡೆದರು.

ನೀರಿನ ಟ್ಯಾಂಕ್‌ನಲ್ಲಿ ಮಣ್ಣು, ಕೆಸರು!

ಇದೇ ವೇಳೆ ಗ್ರಾಮದ ಪಾದೆಗುಡ್ಡೆ ಪ್ರದೇಶದಲ್ಲಿರುವ ಕುಡಿಯುವ ನೀರಿನ ಟ್ಯಾಂಕ್‌ನೊಳಗೆ ಭಾರಿ ಪ್ರಮಾಣದಲ್ಲಿ ಮಣ್ಣು ಹಾಗೂ ಕೆಸರು ತುಂಬಿಕೊಂಡಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜನರಿಗೆ ಪೂರೈಸುವ ಕುಡಿಯುವ ನೀರಿನ ಟ್ಯಾಂಕ್‌ನ ನಿರ್ವಹಣೆ ಹಾಗೂ ಸ್ವಚ್ಛತೆಯ ಬಗ್ಗೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ಟ್ಯಾಂಕ್‌ನಲ್ಲಿ ಕೆಸರು ತುಂಬಿಕೊಂಡಿರುವಾಗ ಅದನ್ನು ಸ್ವಚ್ಛಗೊಳಿಸಿ, ನೀರಿನ ಗುಣಮಟ್ಟವನ್ನು ಪರಿಶೀಲಿಸದೆ ಪೂರೈಕೆ ಮಾಡುವುದು ಜನರ ಆರೋಗ್ಯದ ದೃಷ್ಟಿಯಿಂದ ಅಪಾಯಕಾರಿ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ನೀರು ಪೂರೈಕೆ ಪುನರಾರಂಭಿಸುವುದರ ಜತೆಗೆ ಟ್ಯಾಂಕ್‌ನಲ್ಲಿರುವ ಮಣ್ಣು, ಕೆಸರನ್ನು ತೆರವುಗೊಳಿಸಿ, ಟ್ಯಾಂಕ್ ಸ್ವಚ್ಛಗೊಳಿಸಬೇಕು. ನೀರಿನ ಗುಣಮಟ್ಟವನ್ನು ಪರೀಕ್ಷಿಸಿ ಸುರಕ್ಷಿತ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version