ಪುತ್ತೂರು: ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ಮುಂಬೈ ಪೊಲೀಸ್ ಹಾಗೂ ATS ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಗಳು, ಪಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಸುಳ್ಳು ಆರೋಪ ಹೊರಿಸಿ, ಬಂಧನದ ಭೀತಿ ಹುಟ್ಟಿಸಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ₹1,31,50,000 (₹1.31 ಕೋಟಿ) ವಂಚಿಸಿರುವ ಘಟನೆ ನಡೆದಿದ್ದು ವಂಚನೆಗೆ ಒಳಗಾದ ವ್ಯಕ್ತಿ ನೀಡಿದ ದೂರಿನಂತೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಗಳು WhatsApp ವಿಡಿಯೋ ಕರೆಗಳ ಮೂಲಕ ನಿರಂತರವಾಗಿ ಬೆದರಿಕೆ ಹಾಕಿ, ಬ್ಯಾಂಕ್ ಖಾತೆಗಳ ಪರಿಶೀಲನೆ ಹಾಗೂ ಹಣದ ದೃಢೀಕರಣದ ನೆಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ RTGS ಮೂಲಕ ಹಣ ವರ್ಗಾಯಿಸುವಂತೆ ಸೂಚಿಸಿದ್ದರು. ಇದನ್ನು ನಂಬಿದ ದೂರುದಾರರು 2026ರ ಸೆಪ್ಟೆಂಬರ್ 2ರಿಂದ ಅಕ್ಟೋಬರ್ 6ರವರೆಗೆ ಹಂತ ಹಂತವಾಗಿ ಒಟ್ಟು ₹1.31 ಕೋಟಿ ಹಣವನ್ನು ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ವಂಚನೆಗೊಳಗಾಗಿದ್ದಾರೆ.
ನಂತರ ತಾವು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ದೂರುದಾರರು ಸೈಬರ್ ಸಹಾಯವಾಣಿ 1930ಕ್ಕೆ ಕರೆ ಮಾಡಿ ದೂರು ನೀಡಿದ್ದಾರೆ. ಈ ಸಂಬಂಧ ದಕ್ಷಿಣ ಕನ್ನಡ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ (CCPS DK) ಅ.ಕ್ರ. 42/2026ರಂತೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಕಲಂ 66(C), 66(D) ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
