ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ ಕಟ್ಟಡದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ಡಿಸೇಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.
ಆರೋಪಿಗಳನ್ನು ನಾವೂರು ನಿವಾಸಿ ರವಿ ಪೂಜಾರಿ, ನಾವೂರು ನಿವಾಸಿ ಸುರೇಶ್ ಇಂಚರ ಹಾಗೂ ದಿನೇಶ್ ಪ್ರಭು ನಾವೂರು ಎಂದು ಗುರುತಿಸಲಾಗಿದೆ.
ಅ.7ರಂದು ನಾವೂರು ಪೇಟೆಯಲ್ಲಿರುವ ಸ್ವಾತಿ ಕಟ್ಟಡದಲ್ಲಿ ಕಾರ್ಯಚರಿಸುತ್ತಿರುವ ಡಾ। ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ತಡ ರಾತ್ರಿ ಡಿಸೇಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿತ್ತು. ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಚುರುಕುಗೊಳಿಸಿದ ಬೆಳ್ತಂಗಡಿ ಪೊಲೀಸರು ಕೃತ್ಯ ನಡೆದ ಒಂದು ವಾರದಲ್ಲಿ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ರವಿ ಪೂಜಾರಿ ಎಂಬಾತನಾಗಿದ್ದಾನೆ ಈತ ಈ ಕೃತ್ಯವನ್ನು ಮಾಡಲು ಸುರೇಶ್ ಇಂಚರ ಹಾಗೂ ದಿನೇಶ್ ಪ್ರಭು ಈತನೊಂಂದಿಗೆ ಸೇರಿ ಸಂಚು ನಡೆಸಿ ಬೆಂಕಿ ಹಚ್ಚುವಂತೆ ಮಾಡಿದ್ದಾರೆ ಎಂಬುದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಬೆಳ್ತಂಗಡಿ ಡಿವೈಎಸ್ಪಿ ರೋಹಿಣಿ ಸಿ.ಕೆ. ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್ ನೇತೃತ್ವದಲ್ಲಿ ಪೊಲೀಸ್ ಉಪ ನೀರಿಕ್ಷಕರಾದ ಆನಂದ್ ಹಾಗೂ ಸಿಖಂದರ್ ಪಾಷಾ ತಂಡ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.




