Home ಅಪಘಾತ ನಿಡಿಗಲ್‌ನಲ್ಲಿ ಹೆದ್ದಾರಿ ಬದಿಯ ಕಂದಕಕ್ಕೆ ಉರುಳಿದ ಕಾರು: ಐವರಿಗೆ ಗಾಯ

ನಿಡಿಗಲ್‌ನಲ್ಲಿ ಹೆದ್ದಾರಿ ಬದಿಯ ಕಂದಕಕ್ಕೆ ಉರುಳಿದ ಕಾರು: ಐವರಿಗೆ ಗಾಯ

2
0

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಕಲ್ಮಂಜ ಗ್ರಾಮದ ನಿಡಿಗಲ್ ಎಂಬಲ್ಲಿ ಕಾರೊಂದು ರಸ್ತೆ ಬದಿಯ ಸುಮಾರು ಕಂದಕಕ್ಕೆ ಬುಡಮೇಲಾಗಿ ಉರುಳಿದ ಘಟನೆ ಗುರುವಾರ ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿಯ ಪೈಕಿ ಐವರು ಗಾಯಗೊಂಡಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ ಮೂಲದ ಕಾರು ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿತ್ತು. ಈ ವೇಳೆ ನಿಡಿಗಲ್ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ತೀರ ಬಲಭಾಗಕ್ಕೆ ಚಲಿಸಿ, ರಸ್ತೆ ಬದಿಯಲ್ಲಿದ್ದ ಕಂದಕಕ್ಕೆ ಉರುಳಿ ಬಿದ್ದಿದೆ. ಕಾರು ಬುಡಮೇಲಾಗಿ ಬಿದ್ದ ಪರಿಣಾಮ ಅದರಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ ಎನ್ನಲಾಗಿದೆ.

ಅಪಘಾತ ನಡೆದ ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಬದಿಯಲ್ಲಿ ಆಳವಾದ ಕಂದಕವಿದೆ. ಆದರೆ ಕಂದಕವಿರುವ ಅಪಾಯಕಾರಿ ಪ್ರದೇಶದಲ್ಲಿ ವಾಹನಗಳು ರಸ್ತೆ ಬಿಟ್ಟು ಕೆಳಕ್ಕೆ ಉರುಳದಂತೆ ತಡೆಬೇಲಿ ಅಳವಡಿಸುವ ಕಾಮಗಾರಿ ಪೂರ್ಣಗೊಂಡಿಲ್ಲ. ಸೂಕ್ತ ಸುರಕ್ಷತಾ ಕ್ರಮಗಳ ಕೊರತೆಯೇ ಇಂತಹ ಅಪಘಾತಗಳಿಗೆ ಆಹ್ವಾನ ನೀಡುವಂತಾಗಿದೆ ಎಂಬ ಆತಂಕ ಸ್ಥಳೀಯರಲ್ಲಿ ವ್ಯಕ್ತವಾಗಿದೆ.

ಕಾರು ಕಂದಕಕ್ಕೆ ಉರುಳಿದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಭಾರೀ ಅನಾಹುತದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here