
ಬೆಳ್ತಂಗಡಿ : ಚಾರ್ಮಾಡಿ ಘಾಟ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನ.22 ರಂದು ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನ ಅಲೆಖಾನ್ ಸಮೀಪ ಈ ದುರ್ಘಟನೆ ಸಂಭವಿಸಿದ್ದು, ಬೆಂಗಳೂರಿನ ಚಿರಾಗ್ (24) ಮೃತಪಟ್ಟ ಯುವಕ. ಆತನೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಯಶಸ್ ಅಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಚಾರ್ಮಾಡಿ ಘಾಟ್‌ನ ಪ್ರಕೃತಿ ಸೌಂದರ್ಯ ಹಾಗೂ ವ್ಯೂ ಪಾಯಿಂಟ್‌ಗಳನ್ನು ವೀಕ್ಷಿಸಲು ಬಂದಿದ್ದ ಇಬ್ಬರು ಕಾಲೇಜು ಸ್ನೇಹಿತರು ಬೈಕ್‌ನಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಮುಂದೆ ಸಾಗುತ್ತಿದ್ದ ವಾಹನವನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸಿದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಾಗಿದ್ದ ಚಿರಾಗ್ ರಸ್ತೆಗೆ ಎಸೆಯಲ್ಪಟ್ಟು ಬಿದ್ದಿದ್ದಾನೆ. ಇದೇ ಸಂದರ್ಭದಲ್ಲಿ ಕಡೂರಿನಿಂದ ಧರ್ಮಸ್ಥಳದ ಕಡೆಗೆ ಸಂಚರಿಸುತ್ತಿದ್ದ ಬಸ್‌ನ ಹಿಂಬದಿ ಚಕ್ರ ಯುವಕನ ತಲೆಯ ಮೇಲೆ ಹರಿದಿದೆ. ಪರಿಣಾಮ ಹೆಲ್ಮೆಟ್ ಧರಿಸಿದ್ದರೂ ತಲೆಗೆ ಗಂಭೀರ ಗಾಯಗಳಾಗಿವೆ.
ತಕ್ಷಣವೇ ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಲಾಗಿದ್ದು, ಆದರೆ ಮಾರ್ಗಮಧ್ಯೆಯೇ ಚಿರಾಗ್ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.