ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ 13 ವರ್ಷಗಳ ಹಿಂದೆ ನಡೆದಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿ ಕು. ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಾ.23 ರಂದು ಸುಪ್ರೀಂಕೋರ್ಟ್ ಸಿಬಿಐಗೆ ನೊಟೀಸ್ ಜಾರಿ ಮಾಡಿದೆ.
ಸೌಜನ್ಯ ತಾಯಿ ಕುಸುಮಾತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇದೀಗ ಸಿವಿಐ ಗೆ ನೋಟೀಸ್ ಜಾರಿ ಮಾಡಿದೆ.
2012 ರ ಅಕ್ಟೋಬರ್‌ನಲ್ಲಿ ನಾಪತ್ತೆಯಾಗಿದ್ದ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಸೌಜನ್ಯ ಅವರ ಮೃತದೇಹ ಮರುದಿನ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣದ ಕುರಿತು ಆರಂಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ನಂತರ ಸಿಐಡಿ ತನಿಖೆ ನಡೆದು ಬಳಿಕ ಸಿಬಿಐ ತನಿಖೆ ನಡೆದಿತ್ತು. ಕಾರ್ಕಳದ ಸಂತೋಷ್ ರಾವ್ ಎಂಬಾತನನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದಡಿ ಬಂಧಿಸಲಾಗಿತ್ತು.
ಕೆಲವು ಸಮಯಗಳ ಹಿಂದೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಸಂತೋಷ್ ರಾವ್‌ನನ್ನು ನಿರ್ದೋಷಿ ಎಂದು ತೀರ್ಪು ನೀಡಿ ಬಿಡುಗಡೆಗೊಳಿಸಿತ್ತು.
ಈ ವೇಳೆ ಸಿಬಿಐ ನ್ಯಾಯಾಲಯ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳ ಲೋಪದೋಷಗಳನ್ನು ಎತ್ತಿ ತೋರಿಸಿತ್ತು. ನೈಜ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ತನಿಖಾ ತಂಡ ವಿಫಲವಾಗಿದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು. ಇದೇ ಅಂಶವನ್ನು ಆಧಾರವಾಗಿಟ್ಟುಕೊಂಡು ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಹೈ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು ಇದರ ಬಗ್ಗೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ಪ್ರಮುಖ ವಿಚಾರಗಳನ್ನು ಮುಂದಿಟ್ಟು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಕುಸುಮಾವತಿ ಅವರ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೀಠ ಕೆಳ ನ್ಯಾಯಾಲಯದ ತೀರ್ಪನ್ನು ಗಮನಿಸಿ ಪ್ರಕರಣದ ತನಿಖೆಯ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ಸೂಚಿಸಿ ನೋಟೀಸ್ ಜಾರಿಗೊಳಿಸಿದೆ.
ಕಳೆದ ಎರಡು ದಶಕಗಳಿಂದ ನ್ಯಾಯಕ್ಜಾಗಿ ನಡೆತುತ್ತಿರುವ ನಿರಂತರ ಹೋರಾಟ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ಮತ್ತೆ ಮರು ಚಾಲನೆ ದೊರೆತಂದಾಗಿದೆ



