ಬೆಳ್ತಂಗಡಿ; ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ , ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀಡದೆ ವಂಚನೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲಾತಿ ಕಲ್ಪಸದೆ ವಂಚಿಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ವ್ಯಾಪಕ ಚರ್ಚೆಯಾದ ಘಟನೆ ನಡೆಯಿತು.
ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಂದುಕೊರತೆಗಳ ಸಭೆಯಲ್ಲಿ ಹೋರಾಟಗಾರ ಶಿವಾನಂದ ಪಡಂಗಡಿ ಮಾತನಾಡಿ ತಾಲೂಕಿನ 36 ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ , ಹೊರಗುತ್ತಿಗೆಯಡಿ ನೇಮಕಾತಿಯಲ್ಲಿ ಯಾವುದೇ ರೀತಿಯ ಮೀಸಲಾತಿ ಪ್ರಕ್ರಿಯೆ ನಡೆಸದೆ ವ್ಯವಸ್ಥಿತವಾಗಿ ದಲಿತರನ್ನು ಹೊರಗಿಡಲಾಗುತ್ತಿದೆ ಎಂದು ಆರೋಪಿಸಿದರು. ಸರ್ಕಾರದ ಸುತ್ತೋಲೆಯನ್ನು ತಪ್ಪಾಗಿ ಅರ್ಥೈಸಿಕೊಂಡು ದಲಿತ ಸಮುದಾಯದ ವಿದ್ಯಾವಂತ ಅರ್ಹ ಅಭ್ಯರ್ಥಿಗಳನ್ನು ಹೊರಗಿಡಲಾಗುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ ಎಂದರು.
ಇದೇ ಸಂದರ್ಭದಲ್ಲಿ ಸುಕೇಶ್ ಮಾಲಾಡಿ ಮಾತನಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಕೂಡ ನೇಮಕಾತಿ ಸಂದರ್ಭದಲ್ಲಿ ಯಾವುದೇ ಮೀಸಲಾತಿ ಪ್ರಕ್ರಿಯೆ ನಡೆಸದೆ ವಂಚಿಸಲಾಗುತ್ತಿದೆ ಎಂದುಆರೋಪಿಸಿದರು. ಮಾಜಿಜಿಲ್ಲಾ ಪಂಚಾಯತು ಸದಸ್ಯ ಶೇಖರ ಕುಕ್ಕೇಡಿ ಮಾತನಾಡಿ ಸರ್ಕಾರದ ಸ್ಪಷ್ಟ ಆದೇಶವಿದ್ದರೂ ಅದನ್ನು ಗಾಳಿಗೆ ತೂರಿ ನೇಮಕಾತಿ ನಡೆಸಲಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಮಧ್ಯ ಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ” ಎರಡೂ ಪ್ರಕರಣಗಳನ್ನು ಜಿಲ್ಲಾಡಳಿತ ಪರಿಶೀಲನೆ ನಡೆಸಲಿದ್ದಹ , ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚರ್ಚಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತೇವೆ ಎಂದು ಉತ್ತರಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.




