ಬೆಳ್ತಂಗಡಿ:ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೇರಿರುವ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಿ, ಒತ್ತುವರಿ ನಡೆಸಿ ವಂಚಿಸುತ್ತಿರುವವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯ ಅವರು ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿಗಳಿಗೆ ಈ ದೂರು ನೀಡಿದ್ದಾರೆ.
ದೂರಿನಲ್ಲೇನಿದೆ?
ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ, 1993ನೇ ಇಸವಿಯಲ್ಲಿ ದೇವಸ್ಥಾನದ ಎದುರಿನಲ್ಲಿ ಕಾಯ್ದಿರಿಸಲಾಗಿದ್ದ ಜಾಗವನ್ನು (ಸರ್ವೇ ನಂಬರ್ 215/1 – 257/92-93, ದಿನಾಂಕ: 28.08.1993) ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.
2012 ರಿಂದ 2015ರವರೆಗೆ ಶ್ರೀ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿದ್ದ ಕೃಷ್ಣ ಭಟ್ (ಹಿತ್ತಿಲು ಮನೆ, ಕೊಕ್ಕಡ ಗ್ರಾಮ) ಎಂಬುವವರು,ತಾವು ಅಧ್ಯಕ್ಷ ರಾಗಿರುವ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಗೆ ಅವರ ಅಧಿಕಾರಾವಧಿಯಲ್ಲಿ ದೇವಸ್ಥಾನದ ಜಾಗವನ್ನು ತಮ್ಮ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ನ ಜಾಗದೊಂದಿಗೆ ಸೇರಿಸಿ ಒತ್ತುವರಿ ಮಾಡಿಕೊಂಡಿದ್ದು, ದೇವರಿಗೆ ಮತ್ತು ದೇವಸ್ಥಾನಕ್ಕೆ ವಂಚನೆ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ ಗ್ರಾಮ ಪಂಚಾಯತ್ ಹಾಗೂ ಯಾವುದೇ ಸಂಬಂಧಪಟ್ಟ ಇಲಾಖೆಯ ಪೂರ್ವಾನುಮತಿ ಅಥವಾ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ 7 ಅಂಗಡಿ ಕೊಠಡಿಗಳನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಶಾಂತಿ ಭಂಗ ಮತ್ತು ಅಕ್ರಮ ಹಣ ವಸೂಲಿ:
ಈ ಅಂಗಡಿ ಕೊಠಡಿಗಳನ್ನು ಕಾನೂನುಬಾಹಿರವಾಗಿ ಇತರೆ ವ್ಯಕ್ತಿಗಳಿಗೆ ಬಾಡಿಗೆಗೆ ನೀಡಿ ಅಕ್ರಮವಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೆ, ಈ ಅಂಗಡಿಗಳನ್ನು ಪಡೆದವರಲ್ಲಿ ಕೆಲವರು ರೌಡಿಶೀಟರ್ಗಳು ಹಾಗೂ ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದವರಾಗಿದ್ದಾರೆ. ಇವರು ದೇವಸ್ಥಾನದ ಆವರಣದಲ್ಲಿ ಪ್ರತಿದಿನ ಜಗಳವಾಡಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಈ ರೀತಿಯ ಅಕ್ರಮ ಚಟುವಟಿಕೆಗಳು ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿ ದೇವಸ್ಥಾನ ಹಾಗೂ ಆಡಳಿತ ಸಮಿತಿಯ ಗೌರವಕ್ಕೆ ಧಕ್ಕೆ ತರುತ್ತಿದ್ದು, ನಕಾರಾತ್ಮಕ ಸುದ್ದಿಗಳು ಹರಡಲು ಕಾರಣವಾಗಿದೆ. ಆದ್ದರಿಂದ ದೇವಸ್ಥಾನದ ಜಾಗದಲ್ಲಿ ಅಕ್ರಮ ಕಟ್ಟಡ ಕಟ್ಟಿ ಅಕ್ರಮ ವ್ಯವಹಾರ ನಡೆಸುತ್ತಿರುವವರ ಮೇಲೆಯೂ, ಶಾಂತಿ ಭಂಗ ಉಂಟುಮಾಡುತ್ತಿರುವವರ ಮೇಲೆಯೂ ತಕ್ಷಣವೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ದೂರಿನಲ್ಲಿ ವಿನಂತಿಸಿದ್ದಾರೆ.




